ಬಿಹಾರದಲ್ಲಿ ಬಿಸಿಲಿನ ಝಳಕ್ಕೆ 117 ಮಂದಿ ಬಲಿ; ಗಯಾದಲ್ಲಿ ಸೆಕ್ಷನ್ 144 ಜಾರಿ, ಜೂ.22ರವರೆಗೆ ಶಾಲಾ-ಕಾಲೇಜಿಗೆ ರಜೆ
ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ವಿಧಿಸಿದ್ದು, ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಟ್ನಾ: ಬಿಹಾರ ರಾಜ್ಯದಲ್ಲಿ ರಣಬಿಸಿಲಿನ ತಾಪಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಮೃತಪಟ್ಟವರ ಸಂಖ್ಯೆ 117 ತಲುಪಿದೆ.
ಕಳೆದ 48 ಗಂಟೆಗಳಲ್ಲಿ ಮುಂಗರ್ ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಈ ಬೆನ್ನಲ್ಲೇ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ವಿಧಿಸಿದ್ದು, ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈ ಸಮಯದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ, ಎಂಎನ್‌ಆರ್‌ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಿಗ್ಗೆ 10.30 ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕೆಲಸ ಮಾಡಿಸುವಂತಿಲ್ಲ ಎಂದು ಹೇಳಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಏತನ್ಮಧ್ಯೆ ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಸರ್ಕಾರದಿಂದ ಅಗತ್ಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ಬಿಸಿಲ ತಾಪಕ್ಕೆ ಜೀವ ತೊರೆದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ. . ಮೃತ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.