ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಒಂದು ಮಗು ಸಾವನ್ನಪ್ಪಿದ್ದು,  ನಾಲ್ಕು ಮಕ್ಕಳು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.


COMMERCIAL BREAK
SCROLL TO CONTINUE READING

ಹೈದರಾಬಾದ್‌ನ ಎಲ್‌ಬಿ ನಗರ ಪ್ರದೇಶದ ಶೈನ್ ಚಿಲ್ಡ್ರನ್ ಆಸ್ಪತ್ರೆಯಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.


ವರದಿಗಳ ಪ್ರಕಾರ, ಆಸ್ಪತ್ರೆಯ ಐಸಿಯು ಘಟಕವು ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿಗೆ ಆಹುತಿಯಾಗಿದ್ದು, ಅಲ್ಲಿ ದಾಖಲಾದ ಒಂಬತ್ತು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಇತರ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.


ಅಪಘಾತದ ಸಮಯದಲ್ಲಿ ಒಟ್ಟು 42 ಮಕ್ಕಳು ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎನ್ನಲಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಗಾಜಿನ ಕಿಟಕಿಗಳನ್ನು ಒಡೆದು ಬೆಂಕಿಯನ್ನು ನಂದಿಸಿದ್ದಾರೆ. 


ಆದರೆ, ಬೆಂಕಿ ಅನಾಹುತದಿಂದಾಗಿ ಮಕ್ಕಳನ್ನು ಕಳೆದುಕೊಂಡ ಪೋಷಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಆಸ್ಪತ್ರೆ ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ.