ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದು: ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯ ಬಿಜೆಪಿ ಸರ್ಕಾರ `ಆಪರೇಷನ್ ಕಮಲದ ಅನೈತಿಕ ಕೂಸು` ಎಂದು ಬಣ್ಣಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ 'ಆಪರೇಷನ್ ಕಮಲದ ಅನೈತಿಕ ಕೂಸು'. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ ಸಿದ್ದರಾಮಯ್ಯ, ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.
ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ:
ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮನ್ನು ವಿರೋಧಿ ಎನ್ನುತ್ತಿದ್ದ ಜೆಡಿಎಸ್ ಗೆ ಟಾಂಗ್ ನೀಡಿದರು.
ನಮ್ಮದು(ಕಾಂಗ್ರೆಸ್) ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿ ನಾಯಕರ ನಿಜಬಣ್ಣ. ಅಧಿಕಾರಕ್ಕೆ ಬರುವ ಮುಂಚೆ ಅವರು ಹೇಳುವುದು ಒಂದು, ಅಧಿಕಾರಕ್ಕೆ ಬಂದಮೇಲೆ ಮಾಡುವುದು ಇನ್ನೊಂದು ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹೈದಿದ್ದಾರೆ.