ಜಗನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಜೂನ್ 15ಕ್ಕೆ ವೈಎಸ್ಆರ್ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ
ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಭೆಯಲ್ಲಿ ಅಧಿವೇಶನದಲ್ಲಿ ಯಾವ ವಿಚಾರಗಳ ಪ್ರಸ್ತಾಪ ಮಾಡಬೇಕು ಹಾಗೂ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು ಎನ್ನಲಾಗಿದೆ.
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಇದೇ ಜೂನ್ 15ರಂದು ನವದೆಹಲಿಯಲ್ಲಿ ಹೊಸದಾಗಿ ಚುನಾಯಿತರಾಗಿರುವ ಸಂಸತ್ ಸದಸ್ಯರ ಸಂಸದೀಯ ಪಕ್ಷದ ಸಭೆ ನಡೆಯಲಿದೆ.
ರಾಷ್ಟ್ರ ರಾಜಧಾನಿಗೆ ಶುಕ್ರವಾರ ರಾತ್ರಿಯೇ ಆಗಮಿಸಲಿರುವ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಲೋಕಸಭೆಯ ಎಲ್ಲಾ 22 ಸಂಸದರು ಮತ್ತು ರಾಜ್ಯಸಭೆಯ 2 ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಭೆಯಲ್ಲಿ ಅಧಿವೇಶನದಲ್ಲಿ ಯಾವ ವಿಚಾರಗಳ ಪ್ರಸ್ತಾಪ ಮಾಡಬೇಕು ಹಾಗೂ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು ಎನ್ನಲಾಗಿದೆ. ಮೂಲಗಳ ಪ್ರಕಾರ, ರಾಜ್ಯ ವಿಭಜನೆ ಸಂದರ್ಭದಲ್ಲಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ಮತ್ತು ರಾಜ್ಯ ಸಂಬಂಧಿತ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.
ಇದೇ ಸಂದರ್ಭದಲ್ಲಿ ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಜಗನ್ ಮೋಹನ್ ರೆಡ್ಡಿ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿ ಅವರ ವೈಎಸ್ಆರ್ಸಿಪಿ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನುಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಪಡೆದು ಸರ್ಕಾರ ರಚಿಸಿದೆ. ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಮೇ 30ರಂದು ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯ ವಿಭಜನೆಯ ಬಳಿಕ ಆಂಧ್ರಪ್ರದೇಶದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ.