ಪ್ರಾದೇಶಿಕ ಪಕ್ಷಗಳಿಗೆ ಕರುಣಾನಿಧಿ ಮಾರ್ಗದರ್ಶಿ ಆಗಿದ್ದರು: ಹೆಚ್.ಡಿ.ದೇವೇಗೌಡ
ಎಂ.ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಮಾರ್ಗದರ್ಶಿ ಆಗಿದ್ದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥರಾಗಿದ್ದ ಎಂ.ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಮಾರ್ಗದರ್ಶಿ ಆಗಿದ್ದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ನಿಧಾನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, "ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ದಾರಿ ದೀಪವಾಗಿದ್ದರು. ಅವರ ನಿಧನ ನೂರಾರು ಬೆಂಬಲಿಗರು ಮತ್ತು ಪ್ರೀತಿಪಾತ್ರರಿಗೆ ದುರಂತವಾಗಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.
ಕಳೆದ ಒಂದು ವಾರದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕರುಣಾನಿಧಿ ಇಂದು ಸಂಜೆ 6.10ಕ್ಕೆ ನಿಧನರಾಗಿದ್ದಾರೆ. ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಡಿಎಂಕೆ ನಾಯಕ ಎಂ.ಕರುಣಾನಿಧಿ(94) ಅವರನ್ನು ಜುಲೈ 28ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.