ತೆಲಂಗಾಣ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಕೆಸಿಆರ್ ಪ್ರಮಾಣ ವಚನ ಸ್ವೀಕಾರ
ಜನಪರವಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತೇನೆ ಎಂದು ಕೆಸಿಆರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ ಅಧಿನಾಯಕ ಕೆ.ಸಿ.ಚಂದ್ರಶೇಖರ್ ರಾವ್ ಅವರು ತೆಲಂಗಾಣದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಸಂವಿಧಾನಬದ್ಧವಾಗಿ, ಜನಪರವಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತೇನೆ ಎಂದು ಕೆಸಿಆರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇನ್ನು ಚಂದ್ರಶೇಖರ ರಾವ್ ಅವರೊಂದಿಗೆ ಟಿಆರ್ ಎಸ್ ಹಿರಿಯ ಶಾಸಕ ಮಹಮದ್ ಅಲಿ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪೂರ್ಣ ಪ್ರಮಾಣದ ಮಂತ್ರಿಮಂಡಲವನ್ನು ಇದೇ ಡಿಸೆಂಬರ್ 18ರಂದು ರಚಿಸುವುದಾಗಿಯೂ ಅಂದೇ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಆರ್ ಎಸ್ ಮೂಲಗಳು ತಿಳಿಸಿವೆ.
ಇತ್ತೀಚೆಗೆ ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ 119 ಸದಸ್ಯ ಬಲದ ವಿಧಾನಸಭೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ ಎಸ್ ಪಕ್ಷ 88ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿದೆ. ಅಲ್ಲದೆ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆದ್ದಿದ್ದ ಶಾಸಕರೂ ಕೂಡ ಸಿಎಂ ಕೆಸಿಆರ್ ನೇತೃತ್ವದ ಟಿಆರ್ ಎಸ್ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿರುವುದು ವಿಶೇಷ. ಈ ಚುನಾವಣೆಯಲ್ಲಿ ಕಾಂಗ್ರೆಸ್, ತೆಲುಗು ದೇಶಂ ಪಕ್ಷ(ಟಿಡಿಪಿ), ಸಿಪಿಐ, ತೆಲಂಗಾಣ ಜನ ಸಮಿತಿಯ ಪ್ರಜಾಕುಟಾಮಿ ಮಹಾಮೈತ್ರಿಕೂಟ ಧೂಳಿಪಟವಾಗಿತ್ತು.