ಕೇಶವ್ ಚಂದ್ ಯಾದವ್ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ
ಕನ್ನಡಿಗ ಶ್ರೀನಿವಾಸ್ ಬಿ ವಿ ಅವರನ್ನು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಶವ್ ಚಂದ್ ಯಾದವ್ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಶ್ರೀನಿವಾಸ್ ಬಿ ವಿ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ಮೂಲತಃ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯವರಾದ ಕೇಶವ್ ಚಂದ್ ಯಾದವ್ ಅವರು ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು ಅಲ್ಲದೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢ ರಾಜ್ಯಗಳ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಅದೇ ರೀತಿಯಾಗಿ ಕರ್ನಾಟಕದ ಶ್ರೀನಿವಾಸ್ ರವರು ಪ್ರಸ್ತುತ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.ಈಗ ಅವರನ್ನು ಉಪಾಧ್ಯಕ್ಷ ಹುದ್ದೆಗೆ ಬಡ್ತಿ ನೀಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಟಿ ಮತ್ತು ರಾಜಕಾರಣಿ ರಮ್ಯ ಅವರು ಹೆಸರು ಕೂಡ ಸ್ಪರ್ಧೆಯಲ್ಲಿತ್ತು ಆದರೆ ಕೊನೆಯದಾಗಿ ರಾಹುಲ್ ಗಾಂಧಿಯವರು ಕೇಶವ್ ಚಂದ್ ಯಾದವ್ ಅವರಿಗೆ ಮಣೆ ಹಾಕಿದ್ದಾರೆ ಎಂದು ಹೇಳಲಾಗಿದೆ.