ಐಆರ್‌ಸಿಟಿಸಿ ಹಗರಣ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ಗೆ ಮಧ್ಯಂತರ ಜಾಮೀನು
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ನವದೆಹಲಿಯ ಪಟಿಯಾಲಾ ಹೌಸ್ ಹೈಕೋರ್ಟ್ ನಿಂದ ಜಾಮೀನು ಮಂಜೂರು.
ನವದೆಹಲಿ: ರೈಲ್ವೆ ಸಚಿವರಾಗಿದ್ದಾಗ ನಡೆದ ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ನವದೆಹಲಿಯ ಪಟಿಯಾಲಾ ಹೌಸ್ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಅವರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ ನಡೆಸಿದ ಬಳಿಕ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಮಧ್ಯಂತರ ಜಾಮೀನು ನೀಡಿದ್ದಾರೆ.
ಈ ವೇಳೆ, ಲಾಲು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಗೆ ನ್ಯಾಯಾಧೀಶರು ಸೂಚಿಸಿದರು.
ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ರಾಂಚಿ ಮತ್ತು ಪುರಿಯಲ್ಲಿ ಐಆರ್‌ಸಿಟಿಸಿಯ ಎರಡು ಹೋಟೆಲ್‌ಗಳ ನಿರ್ವಹಣೆಯ ಗುತ್ತಿಗೆಯನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.