ಆಂಧ್ರಪ್ರದೇಶ: ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪನ್ಯಾಸಕ ಎಂ.ವೆಂಕಟೇಶ್ವರ ರಾವ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಪೂರ್ವ ಗೋದಾವರಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪನ್ಯಾಸಕ ಎಂ.ವೆಂಕಟೇಶ್ವರ ರಾವ್ ಅವರು ಸೋಮವಾರ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
28 ವರ್ಷದ ರಾವ್ 10 ದಿನಗಳ ಹಿಂದೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಚೆಯೆರು ಗ್ರಾಮದಲ್ಲಿರುವ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಉಪನ್ಯಾಸಕರಾಗಿ ಸೇರಿಕೊಂಡರು.
ಗುಂಟೂರು ಜಿಲ್ಲೆಯ ಮಂಗಳಗಿರಿ ಪಟ್ಟಣ ಮೂಲದ ರಾವ್ ನಿನ್ನೆ(ಸೋಮವಾರ) ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಪನ್ಯಾಸಕ ರಾವ್ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಪತ್ರವೊಂದು ದೊರೆತಿದ್ದು ಪ್ರೇಮ ಸಂಬಂಧವೇ ರಾವ್ ಅವರ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.