ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರಾ ಸ್ಪರ್ಧೆ!
ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೆಸರು ಪ್ರಮುಖವಾಗಿದ್ದು, ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೆ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿದ್ದು, 36 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೆಸರು ಪ್ರಮುಖವಾಗಿದ್ದು, ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅಲ್ಲದೆ, ಈ ಪಟ್ಟಿಯಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಒಡಿಶಾ ಅಭ್ಯರ್ಥಿಗಳ ಹೆಸರನ್ನೂ ಘೋಷಿಸಲಾಗಿದೆ.
ಆಂಧ್ರ ಪ್ರದೇಶದ 23 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ಏಪ್ರಿಲ್ 11 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಪಟ್ಟಿಯಲ್ಲಿ ಮಹಾರಾಷ್ಟ್ರದ 6 ಮತ್ತು ಒಡಿಶಾದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಅಸ್ಸಾಂ ಮತ್ತು ಮೇಘಾಲಯದ ತಲಾ ಒಂದೊಂದು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗಿದೆ.
ಬಿಜೆಪಿ ಗುರುವಾರ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ 184 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು. ಅದರಲ್ಲಿ ವಾರನಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಉಧಮ್ಪುರದಿಂದ, ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಮೆದೀನಿಪುರ ಕ್ಷೇತ್ರದಿಂದ, ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಲಾಗಿದೆ.