ನವದೆಹಲಿ: 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ.
ದೇಶದಲ್ಲಿ ಮೂವರು ಮಹಿಳಾ ಮುಖ್ಯಮಂತ್ರಿಗಳಿಂದ ಆರಂಭವಾದ ಈ ವರ್ಷ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಬಳಿಕ ಮಮತಾ ಬ್ಯಾನರ್ಜಿ ಒಬ್ಬರೇ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿ ಪಶ್ಚಿಮ ಬಂಗಾಳದಲ್ಲಿ ಮುಂದುವರೆದಿದ್ದಾರೆ.
ರಾಜಸ್ಥಾನದಲ್ಲಿ ವಸುಂಧರಾ ರಾಜೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರೆ, ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರು ಜೂನ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಈ ಬಗ್ಗೆ ಮಾತನಾಡಿರುವ ದೇಶದಲ್ಲೇ ಅತೀ ದೀರ್ಘ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು, "ನನ್ನನ್ನೂ ಸೇರಿದಂತೆ ಎಲ್ಲಾ ಮಹಿಳಾ ಮುಖ್ಯಮಂತ್ರಿಗಳೂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೂ ಸಹ ಅಧಿಕಾರ ಕಳೆದುಕೊಂಡಿದ್ದಾರೆ. ಹೀಗಾಗಿ, ಮಮತಾ ಬ್ಯಾನರ್ಜಿ ದೇಶದ ಎಲ್ಲ ಮಹಿಳೆಯರನ್ನೂ ಪ್ರತಿನಿಧಿಸುವ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಇದು ನನಗೆ ಬಹಳ ಖುಷಿ ತಂದಿದೆ. ಹಾಗೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಮತಾ ಪ್ರಮುಖ ಪಾತ್ರ ವಹಿಸಲಿದ್ದಾರೆ" ಎಂದಿದ್ದಾರೆ.