ಮುಲಾಯಂ ಸಿಂಗ್ ಯಾದವ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರ ಸಂತಾಪ

ಸಮಾಜವಾದಿ ಪಕ್ಷದ ಮುಖ್ಯಸ್ಥ & ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Written by - Puttaraj K Alur | Last Updated : Oct 10, 2022, 12:03 PM IST
  • ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ
  • ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಮುಲಾಯಂ ಸಿಂಗ್ ಉತ್ತಮ ನಾಯಕರಾಗಿದ್ದರು ಎಂದ ಪ್ರಧಾನಿ ಮೋದಿ
  • ಮುಲಾಯಂ ಸಿಂಗ್ ಯಾದವ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮುಲಾಯಂ ಸಿಂಗ್ ಯಾದವ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರ ಸಂತಾಪ  title=
ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಗಣ್ಯರ ಸಂತಾಪ

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ತಮ್ಮ 82ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. 3 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ‘ಮುಲಾಯಂ ಸಿಂಗ್ ಯಾದವ್ ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ಉತ್ತಮ ನಾಯಕರಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರ ಸೇವೆ ಸಲ್ಲಿಸಿದರು ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಮತ್ತು ಡಾ.ರಾಮಮನೋಹರ್ ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು’ ಎಂದು ಹೇಳಿದ್ದಾರೆ.  

ಇದನ್ನೂ ಓದಿ: Big Breaking: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

‘ಮುಲಾಯಂ ಸಿಂಗ್ ಯಾದವ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಅಯವರ ಸಾಧನೆ ಅಸಾಧಾರಣವಾದದು. ‘ಭೂಮಿ ಪುತ್ರ’ ಮುಲಾಯಂಜಿಯರು ಭೂಮಿಗೆ ಸಂಬಂಧಿಸಿದ ಹಿರಿಯ ನಾಯಕರಾಗಿದ್ದರು. ಎಲ್ಲ ಪಕ್ಷಗಳ ಜನರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ‘ಮುಲಾಯಂ ಸಿಂಗ್ ಯಾದವ್ ಜಿ ಅವರು ತಮ್ಮ ವಿಶಿಷ್ಟ ರಾಜಕೀಯ ಕೌಶಲ್ಯದಿಂದ ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಧ್ವನಿ ಎತ್ತಿದ್ದರು. ಅವರು ತಳಮಟ್ಟದ ನಾಯಕರಾಗಿ ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನದಿಂದ ಭಾರತೀಯ ರಾಜಕೀಯದಲ್ಲಿ ಒಂದು ಯುಗ ಅಂತ್ಯಗೊಂಡಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಅಗಲಿದ ಆತ್ಮಕ್ಕೆ ದೇವರು ಅವರ ಪಾದದಲ್ಲಿ ಸ್ಥಾನ ನೀಡಲಿ. ಶಾಂತಿ ಶಾಂತಿ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.

‘ರಾಜಕೀಯದಲ್ಲಿ ಹಗೆತನವಿದ್ದರೂ ಮುಲಾಯಂ ಸಿಂಗ್ ಅವರು ಉತ್ತಮ ಸಂಬಂಧ ಹೊಂದಿದ್ದರು. ಅವರನ್ನು ಭೇಟಿಯಾದಾಗಲೆಲ್ಲ ಹಲವು ವಿಷಯಗಳ ಬಗ್ಗೆ ಬಹಳ ಮುಕ್ತ ಮನಸ್ಸಿನಿಂದ ಮಾತನಾಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ಅವರೊಂದಿಗಿನ ಸಂವಾದಗಳು ನನ್ನ ನೆನಪಿನಲ್ಲಿ ಸದಾ ಉಳಿಯುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ’ ಎಂದು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ನಾವು ಒಂದೇ ಮನೆಯ ಅಣ್ಣ-ತಮ್ಮಂದಿರು ಇದ್ದ ಹಾಗೆ’-ಖರ್ಗೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದು, ‘ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಬದ್ಧರಾಗಿದ್ದರು. ಅವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಅಂತಾ ಹೇಳಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ‘ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ. ಮುಲಾಯಂಸಿಂಗ್ ಉತ್ತರಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News