ಸರ್ಕಾರ ರಚನೆಗೆ ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ರಾಜ್ಯಪಾಲರು ಆಹ್ವಾನ ನೀಡಬೇಕು-ಮಿಲಿಂದ್ ದಿಯೋರಾ
ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಂದಿನ ಸರ್ಕಾರ ರಚಿಸಲು ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟವನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಂದಿನ ಸರ್ಕಾರ ರಚಿಸಲು ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟವನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ-ಶಿವಸೇನೆ ಮೈತ್ರಿಕೂಟ ಈಗ ಸರ್ಕಾರ ರಚನೆಗೆ ನಿರಾಕರಿಸಿರುವುದರಿಂದಾಗಿ ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟವನ್ನು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಆಹ್ವಾನಿಸಬೇಕು ಎಂದು ದಿಯೋರಾ ಹೇಳಿದರು. 'ಮಹಾರಾಷ್ಟ್ರದಲ್ಲಿ ಎರಡನೇ ಅತಿದೊಡ್ಡ ಮೈತ್ರಿಕೂಟವಾಗಿರುವ ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟವನ್ನು ಸರ್ಕಾರ ರಚಿಸಲು ಆಹ್ವಾನಿಸಬೇಕು, ಇದೀಗ ಬಿಜೆಪಿ-ಶಿವಸೇನೆ ಅದನ್ನು ಮಾಡಲು ನಿರಾಕರಿಸಿದೆ' ಎಂದು ಮಿಲಿಂದ್ ದಿಯೋರಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 105 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ದೇವೇಂದ್ರ ಫಡ್ನವೀಸ್ ಅವರಿಗೆ ಕೋರಿದ್ದರು.ಆದರೆ ಚುನಾವಣೆಗೂ ಮೊದಲು ಮೈತ್ರಿಕೂಟವಾಗಿದ್ದ ಬಿಜೆಪಿ-ಶಿವಸೇನಾ ಈಗ 50:50 ಸೂತ್ರದ ಒಪ್ಪಂದದ ವಿಚಾರವಾಗಿ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಈ ಹಿನ್ನಲೆಯಲ್ಲಿ ಎರಡನೇ ಅತಿ ದೊಡ್ಡ ಮೈತ್ರಿಕೂಟವಾಗಿರುವ ಕಾಂಗ್ರೆಸ್-ಎನ್ಸಿಪಿಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ದಿಯೋರಾ ಮನವಿ ಮಾಡಿದ್ದಾರೆ.