ನವದೆಹಲಿ: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ವಂಚಿತರಾಗಿದ್ದ ಕರ್ನಾಟಕದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೇ 20ರಂದು ಮರುಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿರ್ಧರಿಸಿದೆ. 


COMMERCIAL BREAK
SCROLL TO CONTINUE READING

ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ  ಈ ಹಿಂದೆ ತಮಗೆ ನಿಗದಿಸಿದ್ದ ಪರೀಕ್ಷಾ ಕೇಂದ್ರದಲ್ಲಿಯೇ ಮೇ 20ರಂದು ಮರು ಪರೀಕ್ಷೆಯನ್ನು ನಿಗದಿಪಡಿಸಲಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. 


ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್​ ಜಾವ್ಡೇಕರ್​, "ರೈಲು ವಿಳಂಬದಿಂದ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದ ಕರ್ನಾಟಕದ ವಿದ್ಯಾರ್ಥಿಗಳಿಗೆ ಮಾತೊಂದು ಅವಕಾಶ ನೀಡುತ್ತಿರುವ ಬಗ್ಗೆ ತಿಳಿಸಲು ಹರ್ಷಿಸುತ್ತೇನೆ" ಎಂದಿದ್ದಾರೆ.


ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ 'ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (ನೀಟ್‌)' ಮೇ 5ರಂದು ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ರೈಲು ವಿಳಂಬವಾಗಿ ಆಗಮಿಸಿದ ಪರಿಣಾಮ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿದ್ದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿತ್ತು.