ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಗೆ ಮುಂದಾಗಿರುವುದನ್ನು ಟೀಕಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ, ಇದು ಅವಕಾಶವಾದಿ ಮತ್ತು ವಿರೋಧಾಭಾಸದ ಘಟಬಂಧನ ಎಂದಿದ್ದಾರೆ.  


COMMERCIAL BREAK
SCROLL TO CONTINUE READING

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಎರಡನೆ ದಿನವಾದ ಇಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಈ ಹಿಂದೆ ಇದ್ದ ಕೇಂದ್ರ ಸರ್ಕಾರ(ಕಾಂಗ್ರೆಸ್) ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಭ್ರಷ್ಟಾಚಾರವೇ ವಿಶೇಷತೆಯಾಗಿತ್ತು. ಆದರೆ ನಮ್ಮ(ಬಿಜೆಪಿ) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ಮೋದಿ ಅವರು ಉತ್ತಮ ಆಡಳಿತದೊಂದಿಗೆ ದೇಶವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಪ್ರಸ್ತಾಪಿಸುತ್ತಾ, ಉತ್ತರಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯನ್ನು 'ಅವಕಾಶವಾದಿ' ಮತ್ತು 'ವಿರೋಧಾಭಾಸ'ದ ಘಟಬಂಧನ ಎಂದು ಟೀಕಿಸಿದರು.


ಎರಡನೇ ದಿನದ ಸಭೆಯ ಆರಂಭದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ನಾಯಕರು ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ರಾಷ್ಟ್ರೀಯ ಸಮಾವೇಶದಲ್ಲಿ ಉಪಸ್ಥಿತರಿದ್ದರು.