ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದಲ್ಲಿ ಬಿಜೆಪಿ ರಥಯಾತ್ರೆ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಅಲ್ಲಿನ ಹೈಕೋರ್ಟ್ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಅಮಿತ್ ಷಾ ಈ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಖಂಡಿತವಾಗಿಯೂ ರಥಯಾತ್ರೆ ನಡೆಸಲಿದೆ, ಯಾರಿಂದಲೂ ನಮ್ಮನ್ನು ತಡೆಯುವುದಕ್ಕೆ ಸಾಧ್ಯವಿಲ್ಲ, ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಮೂಡಿಸಲು ಬಿಜೆಪಿ ಬದ್ಧವಾಗಿದೆ, ರಥಯಾತ್ರೆಗಳನ್ನು ವಾಪಸ್ ಪಡೆದಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಅಮಿತ್ ಶಾ ಹೇಳಿದ್ದಾರೆ.
ಇನ್ನು, ಮಮತಾ ಬ್ಯಾನರ್ಜಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಷಾ, “ರಥ ಯಾತ್ರೆಯಂಥ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ತಮ್ಮ ಅಧಿಕಾರದ ದುರುಪಯೋಗ ಮಾಡಿಕೊಳ್ಳುವ ಮೂಲಕ ಮಮತಾ ಬ್ಯಾನರ್ಜಿ ಹತ್ತಿಕ್ಕುತ್ತಿದ್ದಾರೆ. ಮುಖ್ಯಮಂತ್ರಿಯ ಈ ಟ್ರೆಂಡ್ ಪ್ರಜಾಪ್ರಭುತ್ವದ ನಿದರ್ಶನವಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.