ಕೊಲ್ಕತ್ತಾ: ರಾಷ್ಟ್ರ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೊಲಿಸುವುದೇ ನಮ್ಮ ಅಜೆಂಡಾ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಿ ಮಹಾಘಟಬಂಧನ್​ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ದೇಶದ ಹಲವು ನಾಯಕರನ್ನು ಭೇಟಿ ಮಾಡುತ್ತಿರುವ ಆಂದ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಮಹಾಮೈತ್ರಿ ಬಗ್ಗೆ ಚರ್ಚೆ ನಡೆಸಿದರು. 


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ಮಮತಾ ಬ್ಯಾನರ್ಜಿ ಅವರು ಕೆಲವು ಜವಾಬ್ದಾರಿಗಳನ್ನು ಹೊತ್ತಿದ್ದೇವೆ. ಅದರಂತೆ ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಕೆಲವು ಸಂಸ್ಥೆಗಳನ್ನು ರಕ್ಷಿಸಬೇಕಿದೆ. ಎಲ್ಲರಿಗೂ ತಿಳಿದಿರುವಂತೆ ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಿಬಿಐ, ಇಡಿ, ಆರ್ ಬಿ ಐ ಸೇರಿದಂತೆ ಅನೇಕ ಸಂಸ್ಥೆಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ಇವೆಲ್ಲವನ್ನೂ ರಕ್ಷಿಸಲು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಹೇಳಿದರು. 



ಇದೇ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೇಶದಲ್ಲಿ ಬಿಜೆಪಿ ದುರಾಡಳಿತವನ್ನು ಕೊನೆಗಾಣಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಒಗ್ಗೂಡಿ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬೇಕಿದೆ. ದೇಶವನ್ನು ಕಾಪಾದಬೇಕಿದೆ. ಸಂಸತ್​ ಚಳಿಗಾಲದ ಅಧಿವೇಶನಕ್ಕೂ ಮುನ್ನ ಎಲ್ಲ ಪ್ರತಿಪಕ್ಷಗಳು ಸೇರಿ ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.