ನವದೆಹಲಿ: ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರಿಗೆ ಗುರುವಾರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ತಲಾ 1 ಲಕ್ಷ ಮೊತ್ತದ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ನೀಡಲಾಯಿತು. ಇನ್ನೂ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ, ಅಗತ್ಯವಿದ್ದಾಗ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯಸೂಚಿಸಿದೆ. ಅಲ್ಲದೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಸಾಕ್ಷ್ಯಗಳನ್ನು ನಾಶ ಮಾಡಬಾರದು, ಅನುಮತಿಯಿಲ್ಲದೆ ದೇಶ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.


ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಮತ್ತು ಕಾರ್ತಿ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿರುವ ಚಾರ್ಜ್‌ಶೀಟ್ ಅನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಅದರಲ್ಲಿ ಉಲ್ಲೇಖಿಸಲಾಗಿದ್ದು, ಈ ಪ್ರಕರಣದಲ್ಲಿ ಒಟ್ಟು 18 ಮಂದಿ ಹೆಸರನ್ನು ಪಟ್ಟಿ ಮಾಡಲಾಗಿದೆ. 


ಕಳೆದ ವಿಚಾರಣೆ ಸಂದರ್ಭದಲ್ಲಿ ಸಮಯದಲ್ಲಿ ಜಾರಿ ನಿರ್ದೇಶನಾಲಯ ತನ್ನ ವಾದವನ್ನು ಸರಿಯಾಗಿ ಮಂಡಿಸದ ಕಾರಣ ನ್ಯಾಯಾಲಯವು ಇಡಿ ವಿರುದ್ಧ ವಾಗ್ದಾಳಿ ನಡೆಸಿತ್ತು.


ಏತನ್ಮಧ್ಯೆ, ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ.ಚಿದಂಬರಂ ಸಲ್ಲಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.