ಇಂದು ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಾರಣಾಸಿಗೆ ತಲುಪಲಿದ್ದು, ಸುಮಾರು 2 ಗಂಟೆಗಳ ಕಾಲ ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿ: ಎರಡನೇ ಬಾರಿಗೆ ಪ್ರಧಾನಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನಿದಲಿದ್ದು, ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ.
ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಾರಣಾಸಿಗೆ ತಲುಪಲಿದ್ದು, ಸುಮಾರು 2 ಗಂಟೆಗಳ ಕಾಲ ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಸಸಿಗಳನ್ನು ನೆಡುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ದೇವನಗರಿಯಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಯನ್ನೂ ಸಹ ಪ್ರಧಾನಿ ಮೋದಿ ಅನಾವರಣ ಮಾಡಲಿದ್ದಾರೆ.
ಜನಸಂಘ ಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನವಾದ ಇಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ 'ಪಂಚವಟಿ' ಎಂದು ಹೆಸರಿಸಿದೆ.
ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣದಲ್ಲಿ, ವಿದೇಶಾಂಗ ಸಚಿವ ಎಸ.ಜೈಶಂಕರ್ ಅಹಮದಾಬಾದ್ ನಲ್ಲಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗಪುರದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಮುಕ್ತಾರ್ ಅಬ್ಬಾಸ್ ನಖ್ವಿ ಮುಂಬೈನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.