ಮುಂಬೈ: ಶಂಕರ್ ಭಾವುರಾವ್ ಚಾಯ್ರೆ ಎನ್ನುವ 50 ವರ್ಷದ ರೈತ ಸಾಲದ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನು ತನ್ನ ಆತ್ಮಹತ್ಯೆಗೆ ಮೋದಿ ಸರ್ಕಾರವೆ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ರೈತನು ಒಂದು ಲಕ್ಷ ರೂಪಾಯಿಗಳ ಸಾಲವನ್ನು ಹೊಂದಿದ್ದು ಆದರೆ ಮಹಾರಾಷ್ಟ್ರ ಸರ್ಕಾರದ ಸಾಲಮನ್ನಾ ಯೋಜನೆಯಿಂದಲೂ ಸಹಿತ ಯಾವುದೇ ರೀತಿಯ ನೆರವು ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ. ಈ ಕುರಿತ ವಿಚಾರವನ್ನು ಮೋದಿಯವರ ಗಮನಕ್ಕೆ ತರುವ ನಿಟ್ಟಿನಲ್ಲಿ ಕುಟುಂಬವು ಮೃತದೇಹವನ್ನು ಅಂತ್ಯ ಸಂಸ್ಕಾರ ನೆರವೇರಿಸಲು ಸಹ ತಿರಸ್ಕರಿಸಿದ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನು" ನಾನು ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಇದಕ್ಕೆ ನರೇಂದ್ರ ಮೋದಿ ಸರ್ಕಾರವೇ ನನ್ನ ಆತ್ಮಹತ್ಯೆಗೆ ಕಾರಣ"ಎಂದು ಪತ್ರದಲ್ಲಿ ಹೇಳಲಾಗಿದೆ.ಈ ಕುರಿತಾಗಿ ಪ್ರತಿಕ್ರಿಯಿಸಿರುವ ಯಾವತ್ಮಲ್ ನ ಪೋಲಿಸ್ ಜಿಲ್ಲಾ ವರಿಷ್ಠಾಧಿಕಾರಿ ರಾಜಕುಮಾರ್ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ ಈಗ ಇದರ ನಿಖರತೆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಪಿಟಿಐ ಗೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಸಾಲದ ಬಾಧೆಯಿಂದಾಗಿ 2016 ರಲ್ಲಿ ಒಟ್ಟು 3,661 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.