ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಕೇರಳದ ವಯನಾಡ್ ನಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.


COMMERCIAL BREAK
SCROLL TO CONTINUE READING

ಗಾಂಧಿ ಕುಟುಂಬದ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಉತ್ತರಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ, ಎರಡನೇ ಕ್ಷೇತ್ರವಾಗಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿಥಾಲ ಸಾಥ್ ನೀಡಲಿದ್ದು, ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಸಹ ಆಗಮಿಸುವ ಸಾಧ್ಯತೆಯಿದೆ. 


ಕೋಜಿಕೋಡ್ ನಿಂದ 90 ಕಿ.ಮೀ. ದೂರದಲ್ಲಿರುವ ವಯನಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ ಷೋ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿಥಾಲ ಹೇಳಿದ್ದಾರೆ.


ಕಾಂಗ್ರೆಸ್ ಹಿರಿಯ ನಾಯಕರಾದ ಮುಕುಲ್ ವಾಸ್ನಿಕ್, ಕೆ.ಸಿ.ವೇಣುಗೋಪಾಲ್, ಮುಲ್ಲಪ್ಪಲ್ಲಿ ರಾಮಚಂದ್ರನ್ ಮತ್ತು ಇಂಡಿಯನ್ ಮುಸ್ಲಿಂ ಲೀಗ್ ನಾಯಕ ಕೆ. ಕುನ್ಹಾಲಿಕುಟ್ಟಿ ರಾಹುಲ್ ಆಗಮನಕ್ಕೆ ಎಲ್ಲಾ ಸಿದ್ಧತೆ ನಡೆಸಿದ್ದಾರೆ. ಅಲ್ಲದೆ, ಕೋಜಿಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 


"ಬುಧವಾರ ರಾತ್ರಿ 8.30ಕ್ಕೆ ಕೋಜಿಕೋಡ್ ಗೆ ಆಗಮಿಸಲಿರುವ ರಾಹುಲ್ ಗಾಂಧಿ, ಅತಿಥಿ ಗೃಹದಲ್ಲಿ ರಾತ್ರಿ ವಿಶ್ರಾಂತಿ ಪಡೆದು, ಗುರುವಾರ ಬೆಳಿಗ್ಗೆ ವಯನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ ಸಮಯದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ" ಎಂದು ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.


ಭಾನುವಾರವಷ್ಟೇ ಕೇರಳದ ವಯನಾಡ್ ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಅಲ್ಲದೆ, ದಕ್ಷಿಣ ಭಾರತದ ಜನರಿಗೆ ಪ್ರಧಾನಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂಬ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನತೆಗೆ ನಾವು ಅವರೊಂದಿಗೆ ಇದ್ದೇವೆ ಎಂಬ ಸಂದೇಶ ರವಾನೆ ಮಾಡಲು ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.