ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಸಿದ್ದರಾಮಯ್ಯ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕರ್ನಾಟಕದಿಂದ ಸ್ಪರ್ಧಿಸುವ ಯಾವುದೇ ಯೋಚನೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ. ಅಮೇಥಿಯಿಂದಲೇ ಕಣಕ್ಕಿಳಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಅಸಮಾಧಾನಗೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಚಾರದಲ್ಲಿ ಅಸಮಾಧಾನವಾಗುವುದು ಸಹಜ. ನಾನು ಮಾತುಕತೆ ನಡೆಸುತ್ತೇನೆ.ಆದರೆ ಈ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದರು.