ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ದೋಷಿ ಎಂದು ನ್ಯಾಯಾಲಯ ತೀರ್ಪು
ಅಸಾರಾಂ ಬಾಪು ಸೇರಿ ಇತರ ನಾಲ್ವರು ಆರೋಪಿಗಳನ್ನು ದೋಷಿ ಎಂದು ಎಸ್ಸಿ, ಎಸ್ಟಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಜೋಧ್ಪುರ : ಆಶ್ರಮದಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಸೇರಿ ಇತರ ನಾಲ್ವರು ಆರೋಪಿಗಳನ್ನು ದೋಷಿ ಎಂದು ಜೋಧ್ಪುರ ಎಸ್ಸಿ, ಎಸ್ಟಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಜೋಧ್ಪುರ ಸೆಂಟ್ರಲ್ ಜೈಲಿನಲ್ಲಿಯೇ ತೀರ್ಪು ಪ್ರಕಟಿಸಿದ ಎಸ್ಸಿ, ಎಸ್ಟಿ ವಿಶೇಷ ಕೋರ್ಟ್ ನ್ಯಾಯಾಧೀಶ ಮಧುಸೂದನ್ ಶರ್ಮಾ ಅವರು 77 ವರ್ಷದ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಸೇರಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಘೋಷಿಸಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನೂ ಇಂದೇ ಪ್ರಕಟಿಸಲಿದ್ದಾರೆ. ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೋದ್ಪುರ ಕೇಂದ್ರ ಕಾರಾಗೃಹದ ಹೊರಭಾಗದಲ್ಲಿ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದೆ. ಅಲ್ಲದೆ, ರಾಜಸ್ಥಾನ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಲ್ಲಿಯೂ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಅಸಾರಾಂ ವಿರುದ್ಧ ತೀರ್ಪು ಪ್ರಕಟವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂತ್ರಸ್ತೆ ತಂದೆ ಶಹಜಾನ್ ಪುರ್ ಅವರು "ಅಸಾರಾಂ ದೋಷಿ ಎಂದು ಸಾಬೀತಾಗಿದೆ. ನನಗೆ ನ್ಯಾಯ ಸಿಕ್ಕಿದೆ. ಈ ಹೋರಾಟದಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂಬ ನಂಬಿಕೆಯಿದೆ. ಕೊಲೆಯಾದ ಅಥವಾ ನಾಪತ್ತೆಯಾದ ಸಾಕ್ಷಿದಾರರಿಗೂ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ" ಎಂದು ಹೇಳಿದ್ದಾರೆ.
2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. ಸೆಪ್ಟೆಂಬರ್ 2ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಅಸಾರಾಂ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯ, ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಒಟ್ಟು 12 ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಈ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ನಂತರ ಅದೇ ವರ್ಷ ನವೆಂಬರ್ ತಿಂಗಳಿನಲ್ಲಿ, ಅಸಾರಾಂ ಮತ್ತು ಇತರ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು, ಭಾರತೀಯ ದಂಡ ಸಂಹಿತೆಯ ಪರಿಚ್ಛೇದ 342, 376, 506 ಮತ್ತು 509, ಮತ್ತು ಮಕ್ಕಳ ರಕ್ಷಣೆಗಾಗಿ ಲೈಂಗಿಕ ಅಪರಾಧಗಳ ಕಾಯ್ದೆ(POCSO)ಯ ಸೆಕ್ಷನ್ 8ರ ಅಡಿಯಲ್ಲಿ ಆರೋಪಿಗಳನ್ನಾಗಿ ದಾಖಲಿಸಿದ್ದರು. ನಂತರ ಅಸಾರಾಂ ವಿರುದ್ಧ ಪ್ರಕರಣಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 7, 2018ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ಏಪ್ರಿಲ್ 25ಕ್ಕೆ ಆದೇಶ ಕಾಯ್ದಿರಿಸಿತ್ತು.