ನವದೆಹಲಿ: ದಶಕಗಳ ಕಾಲ ಹಿಂದೂ ಮತ್ತು ಮುಸ್ಲಿಂ ಬಾಂಧವರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಸಂಧಾನದ ಮುಖಾಂತರವೇ ಈ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆದೇಶಿಸಿದೆ.


COMMERCIAL BREAK
SCROLL TO CONTINUE READING

ಸಂಧಾನಕ್ಕಾಗಿ ತಾನೇ ಸಂಧಾನ ಸಮಿತಿಯನ್ನೂ ಕೂಡ ರಚನೆ ಮಾಡಿರುವ ಸುಪ್ರೀಂಕೋರ್ಟ್, ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮೂವರು ಸಂಧಾನಕಾರರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಖಾಲಿಫುಲ್ಲಾ ನೇತೃತ್ವ ವಹಿಸಲಿದ್ದು, ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚೂ ಸೇರಿದ್ದಾರೆ. ಮಧ್ಯಸ್ಥಿಕೆ ಪ್ರಕ್ರಿಯೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯಬೇಕು. ಫೈಜಾಬಾದ್‌ನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಪೀಠ ತಿಳಿಸಿದೆ.


ಮಧ್ಯಸ್ಥಿಕೆ ಪ್ರಕ್ರಿಯೆಯು ನಾಲ್ಕು ವಾರಗಳೊಳಗಾಗಿ ಮತ್ತು ಎಂಟು ವಾರಗಳಲ್ಲಿ ಪೂರ್ಣಗೊಳ್ಳಬೇಕು. ಸಂಧಾನಕಾರರಿಗೆ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಸೌಲಭ್ಯ ಒದಗಿಸಬೇಕು. ಸಂಧಾನಕಾರರು ಅಗತ್ಯವೆನಿಸಿದಲ್ಲಿ ಹೆಚ್ಚಿನ ಕಾನೂನು ಸಹಕಾರ ಪಡೆಯಬಹುದು ಎಂದು ನ್ಯಾಯಾಲಯ ತಿಳಿಸಿದೆ. 


ಮಧ್ಯಸ್ಥಿಕೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಗೌಪ್ಯವಾಗಿಡಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಿಳಿಸಿದ್ದಾರೆ. ಅಲ್ಲದೆ ಈ ಪ್ರಕ್ರಿಯೆಯಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.