ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಹಿನ್ನಡೆ: ಜಾಮೀನು ನೀಡಲು ನಿರಾಕರಿಸಿದ ಕೋರ್ಟ್
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಇಂದು ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಮಾಜಿ ಕೇಂದ್ರ ಸಚಿವ ಪಿ. ಚಿದಂಬಂರಂ, ಅನಾರೋಗ್ಯದ ಕಾರಣ ಹೈದರಾಬಾದ್ ನಲ್ಲಿ ಚಿಕಿತ್ಸೆ ಪಡೆಯುವ ಅಗತ್ಯವಿರುವುದರಿಂದ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ಪರ ವಕೀಲರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಿ.ಚಿದಂಬರಂ ಅವರ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ಸಮಿತಿ ರಚಿಸಿ ಶುಕ್ರವಾರ ಮಧ್ಯಾಹ್ನದೊಳಗೆ ವರದಿ ಸಲ್ಲಿಸುವಂತೆ ಏಮ್ಸ್ ಆಸ್ಪತ್ರೆಗೆ ದೆಹಲಿ ಉಚ್ಚ ನ್ಯಾಯಾಲಯ ಆದೇಶಿಸಿತ್ತು.
ನ್ಯಾಯಾಲಯದ ಆದೇಶದಂತೆ ಏಮ್ಸ್ ಆಸ್ಪತ್ರೆಯ ವೈದ್ಯರ ಸಮಿತಿ ಇಂದು ತಮ್ಮ ವರದಿ ಸಲ್ಲಿಸಿದ್ದು, ಪಿ.ಚಿದಂಬರಂ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ. ಆದರೆ ಚಿದಂಬರಂ ಅವರ ಆರೋಗ್ಯದ ದೃಷ್ಟಿಯಿಂದ ಮನೆಯ ಆಹಾರ, ಮಿನರಲ್ ವಾಟರ್ ನೀಡುವಂತೆ ಶಿಫಾರಸ್ಸು ಮಾಡಿದೆ.
ಏಮ್ಸ್ ವೈದ್ಯರ ಸಮಿತಿ ಸಲ್ಲಿಸಿದ ವರದಿ ಬಳಿಕ ಚಿದಂಬರಂ ಅವರ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ಚಿದಂಬರಂ ಅವರಿರುವ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸಬೇಕು. ಚಿದಂಬರಂ ಅವರಿಗೆ "ಮನೆಯ ಆಹಾರ, ಮಿನರಲ್ ವಾಟರ್, ಸೊಳ್ಳೆ ಪರದೆ ಬಳಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಹಾಗೂ ಅವರಿಗೆ ಫೇಸ್ ಮಾಸ್ಕ್" ಒದಗಿಸಬೇಕು ಎಂದು ಜೈಲು ಅಧೀಕ್ಷಕರಿಗೆ ನಿರ್ದೇಶನ ನೀಡಿದರು.
ಇದಲ್ಲದೆ ಚಿದಂಬರಂ ಅವರಿಗೆ ನಿಯಮಿತವಾಗಿ ರಕ್ತದೊತ್ತಡ ಪರೀಕ್ಷೆ ಮಾಡುವುದೂ ಸೇರಿದಂತೆ ಅವರ ಆರೋಗ್ಯ ಮೇಲ್ವಿಚಾರಣೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ.