ನವದೆಹಲಿ: ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ಪಕ್ಸದ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಮರಳಲಿ ಎಂದು ಪಕ್ಷದ ಅನೇಕ ನಾಯಕರು ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ ಬಳಿಕ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರೇ ಮತ್ತೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕೇವಲ 52 ಸ್ಥಾನಗಳನ್ನು ಗಳಿಸಿದ ಬಳಿಕ ಕಾಂಗ್ರೆಸ್ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಈ ಹೊಡೆತದಿಂದ ಚೇತರಿಸಿಕೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಕಾಂಗ್ರೆಸ್ ಭದ್ರಕೋಟೆ ಎಂದೇ ಹೆಸರಾಗಿದ್ದ ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಯ ಸೋಲೂ ಸಹ ಮತ್ತಷ್ಟು ಆಘಾತ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಹುಡುಕುತ್ತಿರುವ ಸಂದರ್ಭದಲ್ಲೇ, ಸೋನಿಯಾ ಗಾಂಧಿ ಅವರೇ ಮತ್ತೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು. ಆಗ ಮಾತ್ರ ಕಾಂಗ್ರೆಸ್ ಚೇತರಿಸಿಕೊಳ್ಳಲು ಸಾಧ್ಯ ಎಂಬುದು ಹಲವರ ಅಂಬೋಣ.