ಗುವಾಹಟಿ: ಅಸ್ಸಾಂನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ ಪರಿಣಾಮ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗುವಾಹಟಿಯ ಹಿರಿಯ ಸ್ಟೇಷನ್ ಮಾಸ್ಟರ್ ಕಪೀಂದ್ರ ಶರ್ಮಾ, "ಜುಲೈ 12ರಂದು ಜಟಿಂಗ ಲುಂಪುರ್ ಮತ್ತು ನ್ಯೂ ಹರಂಗಜಾವೊ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಲುಮ್ಡಿಂಗ್ ಮತ್ತು ಬಾದರ್‌ಪುರ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ. ಅಲ್ಲದೆ, ಹಲವು ದೂರ ಪ್ರಯಾಣದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
ರೈಲುಗಳ ಸಾಮಾನ್ಯ ಕಾರ್ಯನಿರ್ವಹಣೆಗೆ ಈಗಾಗಲೇ ದುರಸ್ತಿ ಕಾರ್ಯ ಪ್ರಾರಂಭಿಸಲಾಗಿದೆ. ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ಮಳೆ ಅಡ್ಡಿಯಾಗಿರುವ ಕಾರಣ ಜುಲೈ 18ರೊಳಗೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ" ಎಂದು ಶರ್ಮಾ ಮಾಹಿತಿ ನೀಡಿದರು.
ಇದೇ ವೇಳೆ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.