ನವದೆಹಲಿ: ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ನೀರಜ್ ಶೇಖರ್ ಸೋಮವಾರ ತಮ್ಮ ರಾಜ್ಯಸಭೆ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿರುವ ಶೇಖರ್ ಅವರ ರಾಜೀನಾಮೆಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 


2007ರಲ್ಲಿ ನೀರಜ್ ಶೇಖರ್ ತಮ್ಮ ತಂದೆ ಚಂದ್ರಶೇಖರ್ ಅವರ ಕ್ಷೇತ್ರವಾದ ಉತ್ತರಪ್ರದೇಶದ ಬಲ್ಲಿಯಾದಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2009ರಲ್ಲಿಯೂ ಪುನರಾಯ್ಕೆಗೊಂಡಿದ್ದರು. ಆದರೆ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಮಾಜವಾದಿ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೀರಜ್ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. 


2014 ನವೆಂಬರ್ 26ರಂದು ಉತ್ತರಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಇವರ ಅವಧಿ 2020 ನವೆಂಬರ್ 25ರವರೆಗೆ ಇತ್ತು. ಈ ನಡುವೆಯೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ವೇಳೆ ನೀರಜ್ ಶೇಖರ್ ಸಮಾಜವಾದಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.