ರಫೇಲ್ ಡೀಲ್ ವಿರುದ್ಧ ಪಿಐಎಲ್: ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು
ವಕೀಲ ಮನೋಹರ್ ಲಾಲ್ ಶರ್ಮಾ ಅವರು ಪಿಎಲ್ಐ ಸಲ್ಲಿಸಿದ್ದಾರೆ.
ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಮುಂದಿನವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ.
ವಕೀಲ ಮನೋಹರ್ ಲಾಲ್ ಶರ್ಮಾರಿಂದ ಪಿಐಎಲ್ ಸಲ್ಲಿಸಿದ್ದಾರೆ. ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರದಲ್ಲಿ ಕೆಲವೊಂದು ನ್ಯೂನತೆಗಳಿವೆ. ಹಾಗಾಗಿ ಅದಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಸ್ಕರಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಜಸ್ಟಿಸ್‌ಗಳಾದ ಎ.ಎಂ. ಖಾನ್‌ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಶರ್ಮ ಅವರ ಮನವಿಯನ್ನು ಪರಿಗಣಿಸಿ, ತುರ್ತು ವಿಚಾರಣೆಗಾಗಿ ಪಟ್ಟಿ ಮಾಡಿದೆ.
ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿರುವ ರಫೇಲ್ ಡೀಲ್:
ಪ್ರಾನ್ಸ್ ನಿಂದ ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು 2016ರಲ್ಲಿ ಸರ್ಕಾರ 58,000 ಕೋಟಿ ರೂಪಾಯಿಯ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಮಾಜಿ ಕೇಂದ್ರ ಸಚಿವರಾದ ಅರುಣ್ ಶೌರಿ, ಯಶವಂತ್ ಸಿನ್ಹಾ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಈ ಮೂವರೂ ನಾಯಕರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುತ್ತಿದೆ. 58,000 ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿರುವ ಈ ಒಪ್ಪಂದವು ಭಾರತೀಯ ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ, ಸಿಎಜಿಯಿಂದ ಸಂಪೂರ್ಣ ವ್ಯವಹಾರದ ಲೆಕ್ಕ ಪರಿಶೋಧನೆಗೆ ಆಗ್ರಹಿಸಿದ್ದರು.