ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ವಿರುದ್ಧ ತಮಿಳುನಾಡು ಮತ್ತೆ ತನ್ನ ಖ್ಯಾತೆ ತೆಗೆದಿದೆ.


COMMERCIAL BREAK
SCROLL TO CONTINUE READING

ಕರ್ನಾಟಕದ ಕಾವೇರಿ ಡಿಸಿಷನ್ ಇಂಪ್ಲಿಮೆಂಟೇಷನ್ ಕಮಿಟಿ ರಚನೆ ಶಿಫಾರಸನ್ನು ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಹೂಡಿದೆ. ಕರ್ನಾಟಕ ಕೇಂದ್ರ ಜಲಸಂಪನ್ಮೂಲ ಸಚಿವರ ನೇತೃತ್ವದ ಸಮಿತಿ ರಚನೆಗೆ ಶಿಫಾರಸು ಮಾಡಿತ್ತು, ಸಮಿತಿಗೆ 6 ಜನ ಸದಸ್ಯರ ಹೆಸರನ್ನು ಸಹ ಸೂಚಿಸಿತ್ತು. ಆದರೆ ಕರ್ನಾಟಕದ ನಡೆಯನ್ನು ವಿರೋಧಿಸಿರುವ ತಮಿಳುನಾಡು ಸುಪ್ರೀಂಕೋರ್ಟ್ ನಲ್ಲಿ ದಾವೆ ಹೂಡಿದ್ದು, ಕಾವೇರಿ ನೀರು ನಿರ್ವಹಣಾ ಮಂಡಳಿ ಆಗಬೇಕೆಂದು ಪಟ್ಟು ಹಿಡಿದಿದೆ.


ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾದೀತೆ?
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಲು ಅಡ್ಡಿಯಾಗಬಹುದೇನೋ ಎಂಬ ಆತಂಕ ಕೆಲವರಲ್ಲಿ ಮೂಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಕರ್ನಾಟಕ, ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳ ನಡುವೆ ಉದ್ಭವಿಸಿರುವ ಜಲ ವಿವಾದ ವಿಷಯದಲ್ಲಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಲು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿರುವುದರಿಂದ 'ಕಾವೇರಿ ನೀರು ನಿರ್ವಹಣಾ ಮಂಡಳಿ' ರಚಿಸಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ ಎಂದು ತಿಳಿಸಿದ್ದಾರೆ.


ಹಿರಿಯ ಸಚಿವರ ಜೊತೆ ಪಳನಿಸ್ವಾಮಿ ಚರ್ಚೆ
ಕಾವೇರಿ ನೀರು ನಿರ್ವಹಣಾ ಮಂಡಳಿ ವಿಚಾರ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಇಂದು ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಕಾವೇರಿ ತೀರ್ಪಿನ ಕುರಿತು ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗುವ ಕುರಿತು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿದುಬಂದಿದೆ.