ಇಂದು ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ಲಾಕ್ಡೌನ್ (Lockdown) ನಿಯಮಗಳಿದ್ದರೂ ಕೊರೊನಾ ಸೋಂಕು ಪೀಡಿತರ ಸಂಖ್ಯೆ ವ್ಯಾಪಕವಾಗಿ ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ.
ನವದೆಹಲಿ: ಲಾಕ್ಡೌನ್ ನಿಯಮಗಳಿದ್ದರೂ ಕೊರೊನಾವೈರಸ್ (Coronavirus) ಸೋಂಕು ಪೀಡಿತರ ಸಂಖ್ಯೆ ವ್ಯಾಪಕವಾಗಿ ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ. ವಲಸೆ ಕಾರ್ಮಿಕರ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ. ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5 ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದರೂ ಸ್ಪಷ್ಟತೆ ಸಿಕ್ಕಿಲ್ಲ. ಜೊತೆಗೀಗ ದೇಶದ 5 ರಾಜ್ಯಗಳಿಗೆ ಅಂಫಾನ್ ಚಂಡಮಾರುತ ಅಪ್ಪಳಿಸುತ್ತಿದೆ. ಇವೆಲ್ಲವುಗಳ ಬಗ್ಗೆ ಚರ್ಚೆ ನಡೆಸಲು ಇಂದು ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಅವರ ಗೃಹ ಕಚೇರಿ ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಈ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ಲಾಕ್ಡೌನ್ (Lockdown) ನಿಯಮಗಳಿದ್ದರೂ ಕೊರೊನಾ ಸೋಂಕು ಪೀಡಿತರ ಸಂಖ್ಯೆ ವ್ಯಾಪಕವಾಗಿ ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಈಗಾಗಲೇ ಕೋವಿಡ್ -19 (Covid-19) ಸೋಂಕು ಪೀಡಿತರ ಸಂಖ್ಯೆ 1 ಲಕ್ಷದ ಗಡಿಯನ್ನೂ ದಾಟಿದೆ. ಜೊತೆಗೆ ಮೃತರ ಸಂಖ್ಯೆಯೂ 3 ಸಾವಿರದ ದಾಟಿ ಮುಂದೆ ಹೋಗುತ್ತಿದೆ. ಸೋಂಕು ಪೀಡಿತರ ಸಂಖ್ಯೆ ವ್ಯಾಪಕವಾಗಿ ಏರಿಕೆ ಆಗುತ್ತಿರುವವ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ.
ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಅವರವರ ಊರಿಗೆ ಹೊರಟು ನಿಂತಿರುವುದು ಕೇಂದ್ರ ಸರ್ಕಾರಕ್ಕೆ ಭಾರೀ ಮುಜುಗರವನ್ನು ಉಂಟುಮಾಡಿದೆ. ವಲಸೆ ಕಾರ್ಮಿಕರ ಫೋಟೋಗಳು ಬೇರೆ ಬೇರೆ ದೇಶದ ಪತ್ರಿಕೆಗಳಲ್ಲೂ ರಾರಾಜಿಸುತ್ತಾ ದೇಶದ ಮಾನ ಹೋಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋಗಿ ವಲಸೆ ಕಾರ್ಮಿಕರನ್ನು ಮಾತನಾಡಿಸಿರುವುದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಲಸೆ ಕಾರ್ಮಿಕರಿಗೆ ಒಂದು ಸಾವಿರ ಬಸ್ಸುಗಳನ್ನು ವ್ಯವಸ್ಥೆ ಮಾಡಿರುವುದು ಕೇಂದ್ರ ಸರ್ಕಾರ ಕೈ ಹಿಸುಕಿಕೊಳ್ಳುವಂತೆ ಮಾಡಿದೆ. ಈ ನಡುವೆ ಕೇಂದ್ರ ಗೃಹ ಇಲಾಖೆ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಅವರವರ ರಾಜ್ಯಗಳಿಗೆ ಹೋಗದಂತೆ ತಡೆದು ರೈಲುಗಳಲ್ಲಿ ಕಳುಹಿಸಿಕೊಡಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೂ ಬಗೆಹರಿಯದಿರುವ ವಲಸೆ ಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5 ಸುದ್ದಿಗೋಷ್ಟಿ ನಡೆಸಿ ವಿವರಣೆ ನೀಡಿದ್ದರೂ ಸ್ಪಷ್ಟತೆ ಸಿಕ್ಕಿಲ್ಲ. ಎಲ್ಲೆಡೆಯಿಂದ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೀಗ 20 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಿಶೇಷ ಪ್ಯಾಕೇಜಿಗೆ ಹಣ ಬಿಡುಗಡೆ ಮಾಡಬೇಕಿದೆ. ಅದಕ್ಕಾಗಿ ಹಣ ಹೊಂದಿಸಿಕೊಳ್ಳಬೇಕಿದೆ. ಈ ಬಗ್ಗೆ ಕೂಡ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.
ಜೊತೆಗೀಗ ದೇಶದ 5 ರಾಜ್ಯಗಳಿಗೆ ಅಂಫಾನ್ (Amphan) ಚಂಡಮಾರುತ ಅಪ್ಪಳಿಸುತ್ತಿದೆ. ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪಾರ ಪ್ರಮಾಣದ ನಷ್ಟ ಸಂಭವಿಸುವ ಸಾಧ್ಯತೆ ಇದೆ. ಆದುದರಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಕೈಗಳ ಬಗ್ಗೆ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ದಲ್ಲದೆ ನಾಲ್ಕನೇ ಹಂತದಲ್ಲಿ ಜಾರಿಗೊಳಿಸಿರುವ ಲಾಕ್ಡೌನ್ ಯಾವ ರೀತಿ ಇದೆ. ಸಮಸ್ಯೆಗಳು ಏನು ಎಂಬ ಬಗ್ಗೆ ಕೂಡ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.