ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ 2014ರ ಚುನಾವಣೆಗಿಂತಲೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಜೀ ನ್ಯೂಸ್ ಜೊತೆ ಮಾತನಾಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, "ನಾನು ನನ್ನ ಬಗ್ಗೆ ಹೇಳುತ್ತೇನೆ ಮತ್ತು ಅದಕ್ಕೆ ಬದ್ಧನಾಗಿರುತ್ತೇನೆ. ನಮ್ಮ ಸರ್ಕಾರ ಏನು ಮಾಡಿದೆ ಎಂಬುದು ಜನತೆಗೆ ತಿಳಿದಿದೆ. ಅದರ ಆಧಾರದ ಮೇಲೆ ಜನರು ಮತ ಚಲಾಯಿಸುತ್ತಾರೆ" ಎಂದಿದ್ದಾರೆ.


ವಾಸ್ತವವಾಗಿ, ನಾಗ್ಪುರ್ ಲೋಕಸಭಾ ಕ್ಷೇತ್ರದಲ್ಲಿ ನಿತಿನ್ ಗಡ್ಕರಿ ಅವರ ವಿರುದ್ಧ ಕಾಂಗ್ರೆಸ್ ನಾನಾ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ. ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈಗ ಮತ್ತೆ ಕಾಂಗ್ರೆಸ್ ಗೆ ಹೋಗಿದ್ದಾರೆ. ಇಂತಹವರಿಂದ ಚುನಾವಣೆ ಮೇಲೆ ಯಾವ ರೀತಿಯ ಪರಿಣಾಮವೂ ಬೀರದು ಎಂದರು.


ಶಿವಸೇನೆ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಸಮಸ್ಯೆಯಿಲ್ಲ.ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನ ನಮ್ಮ ಪಾಲಾಗಲಿದೆ ಎಂದು ಹೇಳಿದರು.


ಅದೇ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿದ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಮೇಲಿನ ಭಯದಿಂದಾಗಿ ಪ್ರತಿಪಕ್ಷಗಳೆಲ್ಲವೂ ಒಗ್ಗಟ್ಟಾಗಿವೆ. ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುವ ಬಿಜೆಪಿಗೆ ನೈತಿಕತೆ ಇದೇ ಎಂದು ತಿಳಿಸಿದರು.


2019ರ ಲೋಕಸಭಾ ಚುನಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗಡ್ಕರಿ, ನಾವು ಏನು ಕೆಲಸ ಮಾಡಿದ್ದೇವೋ ಅದರ ಆಧಾರದ ಮೇಲೆ ನಾವು ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ 50 ವರ್ಷದಲ್ಲಿ ಮಾಡದಿದ್ದನ್ನು ನಾವು ಐದೇ ವರ್ಷದಲ್ಲಿ ಮಾಡಿದ್ದೇವೆ. ನಾವು ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದು ಮತ್ತೆ ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.