ಲಕ್ನೋ: ಉತ್ತರಪ್ರದೇಶದಲ್ಲಿ ಬಾಲಕಿಯರು ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಅಭಿಯಾನ ನಡೆಸಲಿರುವ ಯೋಗಿ ಸರ್ಕಾರ, ಎಲ್ಲಾ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಿದೆ. 


COMMERCIAL BREAK
SCROLL TO CONTINUE READING

ಉತ್ತರಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಅವರು ಈಗಾಗಲೇ ಈ ಅಭಿಯಾನದ ಬಗ್ಗೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಜುಲೈ 1 ರಿಂದ ಜುಲೈ 31ರ ವರೆಗೆ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಅಭಿಯಾನ ನಡೆಸಲು ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪೊಲೀಸ್ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಜ್ಞರು ಶಾಲೆಗಳು ಮತ್ತು ಕಾಲೇಜುಗಳಿಗೆ ಭೇಟಿ ನೀಡುವ ಮೂಲಕ ಹೆಣ್ಣು ಮಕ್ಕಳಲ್ಲಿ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.


ಈಗಾಗಲೇ ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ಸಾಕಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಸಿಎಂ ಯೋಗಿ ಆದಿತ್ಯನಾಥ್, ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಚುಡಾಯಿಸುವ, ಲೈಂಗಿಕ ಕಿರುಕುಳ ನೀಡುವ,, ಅಪಹರಿಸಿ ಅತ್ಯಾಚಾರ ಎಸಗುವ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.