ಬೆಂಗಳೂರು: ಭಾನುವಾರ ಮುಕ್ತಾಯಗೊಂಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕುರಿತು ಪರಾಮರ್ಶೆ ನಡೆಸಲು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.


COMMERCIAL BREAK
SCROLL TO CONTINUE READING

ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಎಂ. ಬಿ. ಪಾಟೀಲ್ ಈ ಕಾರ್ಯಕ್ರಮದ ಕುರಿತು ಕೂಲಂಕಷವಾಗಿ ಚರ್ಚಿಸಿದರು.


ಬೆಂಗಳೂರಿನಿಂದ ಈ ಕಾರ್ಯಕ್ರಮ ಸ್ಥಳಾಂತರವಾಗುವ ಕುರಿತು ಪುಕಾರುಗಳು ಹಬ್ಬಿದ್ದರೂ ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ರಕ್ಷಣಾ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿಯೇ ಆಯೋಜಿಸುವಂತೆ ಅವರು ಮನವಿ ಮಾಡಿದರು.


ಈ ಸಂದರ್ಭದಲ್ಲಿ ನಡೆದ ಎರಡು ಅಹಿತಕರ ಘಟನೆಗಳ ಬಗ್ಗೆ ಮುಖ್ಯಮಂತ್ರಿಗಳು ವಿಷಾದ ವ್ಯಕ್ತಪಡಿಸಿದರು. ಸಭೆಯಲ್ಲಿ ಕಾರ್ಯಕ್ರಮದ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡ ಹಾಗೂ ಘಟನೆಯ ನಂತರ ಕೈಗೊಂಡ ರಕ್ಷಣಾ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಸಂಬಂಧಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳು ಹಾಗೂ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಲು ತೀರ್ಮಾನಿಸಲಾಯಿತು. ವಾಹನ ಕಳೆದುಕೊಂಡವರಿಗೆ ಎಲ್ಲ ರೀತಿಯ ಅಗತ್ಯ ನೆರವು ನೀಡಲು ನಿರ್ಧರಿಸಲಾಯಿತು. 


ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ಅಯೋಜಿಸುವಾಗ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಹ ನಿರ್ಧರಿಸಲಾಯಿತು.
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.