ಬೆಂಗಳೂರು: ಇತ್ತೀಚಿಗೆ ಧಾರವಾಡದಲ್ಲಿ ನಡೆದ ಕಟ್ಟಡ ದುರಂತ ಪ್ರಕರಣ ಮಾಸುವ ಮುನ್ನವೇ, ಬೆಂಗಳೂರಿನ ಲುಂಬಿನಿ ಗಾರ್ಡನ್ ಬಳಿಯಲ್ಲಿರುವ ಜೋಗಪ್ಪ ಲೇಔಟಿನಲ್ಲಿ ನಿರ್ಮಾಣ ಹಂತದಲ್ಲಿದ್ದ ವಾಟರ್ ಟ್ಯಾಂಕ್ ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ವಾಟರ್ ಟ್ಯಾಂಕ್ ಒಳಗೆ 25 ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಟ್ಯಾಂಕ್ ಸೆಂಟ್ರಿಂಗ್ ಕುಸಿದುಬಿದ್ದಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷ್ಣ ಎಂಬ ಕಾರ್ಮಿಕ ಮೃತಪಟ್ಟಿದ್ದು, ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಬಗ್ಗೆ ವರದಿಗಳು ಬಂದಿವೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.