ಬೆಂಗಳೂರು: ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.


COMMERCIAL BREAK
SCROLL TO CONTINUE READING

ಮೈ ಶುಗರ್ ಕಂಪನಿ, ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಶುಕ್ರವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.


ಮೈ ಶುಗರ್ ಕಾರ್ಖಾನೆಯ 330 ನೌಕರರು ಸ್ವಯಂ ನಿವೃತ್ತಿ ಹೊಂದಲು ಇಚ್ಛಿಸಿದ್ದು, 27 ಕೋಟಿ ರೂ. ವೆಚ್ಚದಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಲಾಗುವುದು. ರೈತರಿಗೆ ಹಾಗೂ ಕಾರ್ಖಾನೆಯ ನೌಕರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.


ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ನೀಡುವುದು ಅಥವಾ ಕಾರ್ಯಾಚರಣೆ ಮತ್ತು ನಿರ್ವಹಣೆ ಮೇರೆಗೆ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.


ಕಬ್ಬು ನುರಿಯುವ ಸಾಮರ್ಥ್ಯ ಹೆಚ್ಚಳ, ವಿದ್ಯುತ್ ಉತ್ಪಾದನೆ ಸಾಮರ್ಥ್ಯ ವೃದ್ಧಿ, ಕಾರ್ಖಾನೆಗಳಲ್ಲಿ ಕೈಗೊಳ್ಳಬೇಕಾಗಿರುವ ದುರಸ್ತಿ ಕಾರ್ಯಗಳ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳಿಗೆ ತಿಳಿಸಿದರು.


ಈ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಮತ್ತು ಶಾಸಕ ಸಿ.ಎಸ್.ಪುಟ್ಟರಾಜು ಹಾಗೂ ಅಧಿಕಾರಿಗಳು ಹಾಜರಿದ್ದರು.