ಕಲಬುರಗಿ: 2019ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪಥನವಾಗಲಿದೆ ಎಂದು ಬಿಜೆಪಿ ನಾಯಕ ಡಾ. ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ.


COMMERCIAL BREAK
SCROLL TO CONTINUE READING

ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಉಮೇಶ್ ಜಾದವ್, "ಈ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ನರೇಂದ್ರ ಮೋದಿಯವರು ಮತ್ತೆ ಭಾರತದ ಪ್ರಧಾನಿಯಾಗಲಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಒಂದೆರಡು ದಿನದಲ್ಲೇ ಕರ್ನಾಟಕದಲ್ಲಿ ಸರ್ಕಾರ ಉರುಳಲಿದ್ದು, ಬಿಜೆಪಿ ಸರ್ಕಾರ ರಚಿಸಲಿದೆ" ಎಂದು ಹೇಳಿದರು.


ಕಾಂಗ್ರೆಸ್ ಭದ್ರ ಕೋಟೆಯಾಗಿರುವ, ಸೋಲಿಲ್ಲದ ಸರದಾರ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಶತಾಯಗತಾಯ ಮಣಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಡಾ. ಉಮೇಶ್ ಜಾಧವ್ ಅವರನ್ನು ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸಿದೆ.