ನವದೆಹಲಿ: ಮುಖ್ಯಮಂತ್ರಿ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಗೊಂದಲ ಹೇಳಿಕೆಗಳಿಂದ ಅಸಮಾಧಾನಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ರಾಹುಲ್ ಸಭೆ ನಡೆಸಲಿದ್ದು, ಮುಖ್ಯಮಂತ್ರಿ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮೈತ್ರಿ ನಾಯಕರ ಗೊಂದಲ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.


ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಕೆಲ ಕಾಂಗ್ರೆಸ್ ನಾಯಕರು ಹಲವು ಬಾರಿ ಹೇಳಿಕೊಂಡಿದ್ದರು. ಇದು ಮೈತ್ರಿ ನಾಯಕರಲ್ಲಿ ಕಿಡಿ ಹೊತ್ತಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇರುವ ಅನುಭವಕ್ಕೆ ಅವರು ಎಂದೋ ಮುಖ್ಯಮಂತ್ರಿಯಾಗಬೇಕಿತ್ತು ಎಂದು ಹೇಳಿಕೆ ನೀಡಿದ್ದರು.  


ಸಭೆ ಸಮಾರಂಭಗಳಲ್ಲಿ ಜನರು ನೀವೆ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಕೂಗುತ್ತಾರೆ, ಆಗ ಮತ್ತೆ ತಾವೆಲ್ಲ ನಮ್ಮ‌ ಪಕ್ಷಕ್ಕೆ ಬಹುಮತ ನೀಡಿದರೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅವರಿಗೆ ಹೇಳಿದ್ದೇನೆ. ಅಭಿಮಾನದಿಂದ ನೀವು ಮುಖ್ಯಮಂತ್ರಿಯಾಗಿ ಎಂದು ಹೇಳುವವರ ಬಾಯಿ ಮುಚ್ಚಿಸಲಾಗುತ್ತದೆಯೇ? ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಇದ್ದಾರೆ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಅಪ್ರಸ್ತುತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.


ಇದೀಗ ಈ ಮುಖ್ಯಮಂತ್ರಿ ಹುದ್ದೆ ವಿಚಾರದ ಹೇಳಿಕೆಗಳು ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ರಾಹುಲ್ ಗಾಂಧಿಯವರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.