ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ

5 ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು, ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತವೆಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Written by - Puttaraj K Alur | Last Updated : Jun 27, 2023, 05:16 PM IST
  • ಹಿಂದಿನ ಬಿಜೆಪಿ ಸರ್ಕಾರಗಳ ಪ್ರಮುಖ ಹಗರಣಗಳ ಬಗ್ಗೆ ಸೂಕ್ತ ತನಿಖೆ ನೆಡಸಲಾಗುವುದು
  • ಚಾಮರಾಜನಗರದ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆ
  • ಕೊಟ್ಟ ಮಾತಿನಂತೆ ಕಾಂಗ್ರೆಸ್ ಘೋಷಿಸಿದ ಎಲ್ಲಾ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆಂದ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ  title=
5 ಗ್ಯಾರಂಟಿ ಯೋಜನೆ ಜಾರಿಗೆ ನಿಶ್ಚಿತ!

ಬೆಂಗಳೂರು: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ,  ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಂಗಳವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ‘ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್ ಗೆ ಮತ್ತೆ ಮರುಜೀವ: ಉನ್ನತ ಮಟ್ಟದ ತನಿಖೆಗೆ ನಗರ ಪೊಲೀಸ್ ಆಯುಕ್ತರ ಪತ್ರ

‘ಕೊಟ್ಟ ಮಾತಿನಂತೆ 1 ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು. ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್‍ಸಿಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲವೆಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ಇದು ಕೇಂದ್ರ ಬಿಜೆಪಿ ಸರ್ಕಾರದ ಷಡ್ಯಂತ್ರ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ನವದೆಹಲಿಗೆ ಭೇಟಿ ನೀಡಿದಾಗ ಎಫ್‍ಸಿಐನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ. ಹಾಗಾದರೆ ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್.ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ? ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್‍ಸಿಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಚೇಸ್ ಮಾಡಿ ಹಿಡಿದ KSRTC ನಿರ್ವಾಹಕ,ಚಾಲಕ..!

‘ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ. 2022-23ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. 5 ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು, ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ’ವೆಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News