ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಮೈತ್ರಿಪಕ್ಷಕ್ಕೆ ಭರ್ಜರಿ ಜಯ ದೊರೆತ ಬೆನ್ನಲ್ಲೇ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ 2019ರ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು. 


COMMERCIAL BREAK
SCROLL TO CONTINUE READING

ಇಂದು ಮಧ್ಯಾಹ್ನ 3.30ಕ್ಕೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಚಂದ್ರಬಾಬು ನಾಯ್ಡು, ಪ್ರಸ್ತುತ ರಾಜಕೀಯ ವಿದ್ಯಮಾನ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗ ರಚನೆ ಬಗ್ಗೆ ಚರ್ಚೆ ಮಹತ್ವದ ಚರ್ಚೆ ನಡೆಸಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಾಷ್ಟ್ರೀಯ ಸ್ವಾಯತ್ತ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಿ, ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅಲ್ಲದೆ, ಆದಾಯ ತೆರಿಗೆ ಇಲಾಖೆ ಮತ್ತು ಮಾಹಿತಿ ಇಲಾಖೆಯನ್ನು ವಿರೋಧ ಪಕ್ಷಗಳ ಮೇಲೆ ಹಿಡಿತ ಸಾಧಿಸಲು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ ಪ್ರಜಾಪ್ರಭುತ್ವದ ರಕ್ಷಣೆಗೆ ಬಿಜೆಪಿ ತೊಲಗಿಸುವ ಅಗತ್ಯವಿದೆ. ಅದಕ್ಕೆ ಎಲ್ಲಾ ಜಾತ್ಯಾತೀತ ಪಕ್ಷಗಳು ಬೆಂಬಲ ನೀಡಬೇಕಿದೆ ಎಂದರು.


ನಂತರ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್ಡಿಎ ಸರ್ಕಾರ ಸಂವಿಧಾನಾತ್ಮಕವಾಗಿ ರಚಿಸಲಾದ ಸಂಸ್ಥೆಗಳಿಗೆ ಹಾನಿ ಉಂಟುಮಾಡಿದ್ದಲ್ಲದೆ, ಅನೇಕ ಸಮಸ್ಯೆಗಳನ್ನು ಸೃಷ್ಟಿಸಿದೆ. ಹೀಗಾಗಿ ದೇಶದಲ್ಲಿ ಬಿಜೆಪಿ ತೊಲಗಿಸುವುದು ಕಾಂಗ್ರೆಸ್ ಸೇರಿದಂತೆ ಎಲ್ಲಾ ಜಾತ್ಯಾತೀತ ಪಕ್ಷಗಳ ಜವಾಬ್ದಾರಿಯಾಗಿದೆ ಎಂದರು.



ಮುಂದುವರೆದು ಮಾತನಾಡಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೊಡೆದೋಡಿಸಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರು ಹಲವು ಜಾತ್ಯಾತೀತ ಪಕ್ಷಗಳ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ. ಈ ಬೆನ್ನಲ್ಲೇ ಇಂದು ನನ್ನನ್ನು ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ ಎಂದರು.