ಮೇ.1 ರಿಂದ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಕಡ್ಡಾಯ..!
ಸರ್ಕಾರಿ ಕಚೇರಿಗಳಲ್ಲಿ ನೌಕರರು ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಮೇ. 1 ರಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ನೌಕರರು ಸರಿಯಾದ ಸಮಯಕ್ಕೆ ಬರುವುದಿಲ್ಲ. ಕೆಲ ನೌಕರರು ಕೆಲಸಕ್ಕೆ ತಡವಾಗಿ ಆಗಮಿಸಿ, ಬೇಗ ಕಚೇರಿಯಿಂದ ಹೋಗುತ್ತಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.
2013 ರಲ್ಲೇ ಸರ್ಕಾರ ಈ ನಿಯಮವನ್ನು ಜಾರಿಗೆ ತಂದಿದೆಯಾದರೂ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ. ಹಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಸಾಧನ ಅಳವಡಿಸಿಲ್ಲ. ಈ ಎಲ್ಲಾ ಲೋಪದೋಷಗಳನ್ನೂ ಸರಿಪಡಿಸಿ ಮೇ. 1 ರಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಕಾರ್ಯಗತಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಅಳವಡಿಸುವುದರಿಂದ ಎಲ್ಲಾ ಸರ್ಕಾರಿ ನೌಕರರು ತಪ್ಪದೇ ಬಯೋಮೆಟ್ರಿಕ್ ಬಳಸಬೇಕಾಗುತ್ತದೆ. ಇದರಿಂದ ನೌಕರರು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವುದಲ್ಲದೆ, ಸರ್ಕಾರಿ ಕೆಲಸಗಳು ಚುರುಕುಗೊಳ್ಳುತ್ತವೆ.