ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗಂಡ ಹೆಂಡತಿ ಇಬ್ಬರಿಗೂ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ.
ಇಂದು ಮಧ್ಯಾಹ್ನ ಬಿಜೆಪಿ ಬಿಡುಗಡೆ ಮಾಡಿದ 82 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿತ್ತು. ಇದರ ಜೊತೆಗೆ, ಶಶಿಕಲಾ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಚಿಕ್ಕೋಡಿ-ಸದಲಗ ಕ್ಷೇತ್ರದಿಂದ ಎರಡನೇ ಪಟ್ಟಿಯಲ್ಲಿ ಬಿಜೆಪಿ ಟಿಕೆಟ್ ನೀಡಿದೆ.
ಶಶಿಕಲಾ ಜೊಲ್ಲೆ ಈಗಾಗಲೇ ಆ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದು, ಎರಡನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಇವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಮೊದಲ ಬಾರಿಗೆ ಚುನಾವಣಾ ಎದುರಿಸುತ್ತಿದ್ದರೂ, ಆ ಕ್ಷೇತ್ರದ ಜನರ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ.
ಈ ಜೊಲ್ಲೆ ದಂಪತಿಗಳು ಚಿಕ್ಕೋಡಿಯಲ್ಲಿ ಸಹಕಾರ, ಶಿಕ್ಷಣ, ಹೈನುಗಾರಿಕೆ, ಕೃಷಿ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಸೇವೆ ಸಲ್ಲಿಸಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಅವರಿಂದ ಸ್ಥಾಪಿಸಲ್ಪಟ್ಟ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಇಂದು ಹಲವರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಅಲ್ಲದೆ, ಸಹಕಾರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಜೊಲ್ಲೆ ಉದ್ಯೋಗ ಸಮೂಹ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಬಲಪಡಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ದಂಪತಿಗಳಿಗೆ ಟಿಕೆಟ್ ನೀಡಿರುವ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ವಿಶ್ವಾಸಹೊಂದಿದೆ.