ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದಾಗಿನಿಂದಲೂ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಹೀಗಿದ್ದರೂ, ಟಿಕೆಟ್ ವಂಚಿತರಿಗೆ ಸಮಾಧಾನ ಹೇಳಿ, ಭಿನ್ನಮತ ಬಗೆಹರಿಸುವ ಬದಲು ಪಕ್ಷದ ನಾಯಕರೇ ಮೊದಲು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಘಟಾನುಘಟಿಗಳಾದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸುತ್ತಿದ್ದರೆ, ಬೆಂಗಳೂರಿನಲ್ಲಿ ಆರ್.ಅಶೋಕ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. 


ಮೊದಲಿಗೆ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಶಿಕಾರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್.ಯಡಿಯೂರಪ್ಪ ನಾಮಪತ್ರ ಸಲ್ಲಿಸಲಿದ್ದು, ಛತ್ತೀಸ್​ಗಡ ಮುಖ್ಯಮಂತ್ರಿ ರಮಣ ಸಿಂಗ್, ಕೇಂದ್ರ ಸಚಿವ ಅನಂತ್ ಕುಮಾರ್, ರಮೇಶ್ ಜಿಗಜಿಣಗಿ, ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಸಾಥ್ ನೀಡಲಿದ್ದಾರೆ. 


ಇನ್ನೂ, ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಅಶೋಕ್ ಚನ್ನಮ್ಮಕೆರೆ ಅಚ್ಚುಕಟ್ಟು ಪಾಲಿಕೆ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. 


ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆಯಲಿದ್ದು, ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ.