ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ: ದಿನೇಶ್ ಗುಂಡೂರಾವ್
ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಹುಬ್ಬಳ್ಳಿ: ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊರತು ಪಡಿಸಿ ಬೇರೆ ಯಾವ ನಾಯಕರಿಗೂ ಅಧಿಕಾರವೇ ಇಲ್ಲ. ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಈ ಬಗ್ಗೆ ಕೆಲವು ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಈ ದುಷ್ಟಶಕ್ತಿಗಳಿಂದ ಉಳಿಯಲು ಪಕ್ಷ ಬಲವರ್ಧನೆ ಮಾಡಬೇಕಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ನೀಡಿದೆ. ಹೀಗಾಗಿ ಈ ಭಾರಿ ಸ್ಥಳೀಯ ಚುನಾವಣೆಯಲ್ಲಿ ಗೆಲುವು ನಮ್ಮದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರಲ್ಲದೆ, ರಾಜಕೀಯ ವಿರೋಧಿಗಳು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹುಚ್ಚ ಹುಚ್ಚ ಎನ್ನುತ್ತಿದ್ದಾರೆ. ಓರ್ವ ರಾಷ್ಟ್ರೀಯ ನಾಯಕನ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.