ಶೋಭಾ ಕರಂದ್ಲಾಜೆಗೆ ಯಶವಂತಪುರ ಕ್ಷೇತ್ರದಿಂದ ಟಿಕೆಟ್?
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲಿದೆ ಎನ್ನಲಾಗುತ್ತಿದೆ.
ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎಂದಿದ್ದ ಬಿಜೆಪಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲಿದೆ ಎನ್ನಲಾಗುತ್ತಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾದಾಗಿನಿಂದಲೂ ಬಿ.ಎಸ್.ಯಡಿಯೂರಪ್ಪ ಹೊರತುಪಡಿಸಿ ಇತರ ಸಂಸದರಿಗೆ ಟಿಕೆಟ್ ನೀಡುವುದಿಲ್ಲ ಎಂದೇ ಬಿಜೆಪಿ ಹೈಕಮ್ಯಾಂಡ್ ಹೇಳಿಕೊಂಡು ಬಂದಿತ್ತು. ಆದರೆ ಪಕ್ಷ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿತ್ತು. ಇದನ್ನು ಹಲವರು ಪ್ರಶ್ನಿಸಿದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, "ಶ್ರೀರಾಮುಲು ಅವರಿಗೆ ವಿಶೇಷ ಕಾರಣದಿಂದ ಟಿಕೆಟ್ ನೀಡಲಾಗಿದೆ" ಎಂದು ಹೇಳಿದ್ದರು. ಅಷ್ಟೇ ಅಲ್ಲದೆ, ಶ್ರೀರಾಮುಲು ಅವರನ್ನು ಬಿಜೆಪಿ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಿದೆ ಎಂದೂ ಹೇಳಲಾಗುತ್ತಿತ್ತು.
ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ
ಮತ್ತೊಂದೆಡೆ ಸಂಸದೆ ಶೋಭಾ ಕರಂದ್ಲಾಜೆ ಅವರೂ ಸಹ ತಾವು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಕೊನೆ ಕ್ಷಣದಲ್ಲಿ ಶೋಭಾ ಕರಂದ್ಲಾಜೆಗೆ ಬಿಜೆಪಿ ಯಶವಂತಪುರ ಕ್ಷೇತ್ರದಿಂದ ಟಿಕೆಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
2008ರ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ ಅವರು 57,643 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೃಷ್ಣಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಯಶವಂತ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರಾದರೂ 12,747 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದರು. ಹೀಗಾಗಿ ಈ ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು ಎಂದು ನಿರ್ಧರಿಸಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರನ್ನು ಪುನಃ ಕಣಕ್ಕಿಳಿಸಲು ತೀರ್ಮಾನಿಸಿದೆ ಎನ್ನಲಾಗಿದೆ.
ನಾಳೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಯಡಿಯೂರಪ್ಪ
ಅಲ್ಲದೆ, ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ಸಿದ್ಧವಾಗಿದ್ದು, ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಜೊತೆ ಚರ್ಚಿಸಿದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಒಟ್ಟಾರೆ, ಈ ಬಾರಿ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡಿದೆಯೇ, ಇಲ್ಲವೇ ಎಂಬುದು ಅಧಿಕೃತವಾಗಿ ನಾಳೆ ತಿಳಿಯಲಿದೆ.