ರಾಜ್ಯದಲ್ಲಿ 3 ದಿನಗಳ ಬರ ಅಧ್ಯಯನ ಪ್ರವಾಸ, ಬೆಳಗಾವಿಯಲ್ಲಿ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ
ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಚಳಿಗಾಲದ ಅಧಿವೇಶನದ ಆರಂಭದ ದಿನ ಬೆಳಗಾವಿಯಲ್ಲಿ ಬೃಹತ್ ರೈತ ಹೋರಾಟ ನಡೆಸಲೂ ಸಹ ಬಿಜೆಪಿ ನಿರ್ಧರಿಸಿದೆ.
ಬೆಂಗಳೂರು: ರಾಜ್ಯದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಬರಪೀಡಿತ ಪ್ರದೇಶಗಳ ಅಧ್ಯಯನ ನಡೆಸುವ ಉದ್ದೇಶದಿಂದ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದೆ.
ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಇದೇ ಡಿಸೆಂಬರ್ 3, 4 ಮತ್ತು 5 ರಂದು 'ರಾಜ್ಯದಲ್ಲಿ ರೈತರ ಸಮಸ್ಯೆ ಆಲಿಸಲು ಹಾಗೂ ಬರ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ಆರು ತಂಡಗಳಲ್ಲಿ ರಾಜ್ಯ ಪ್ರವಾಸಕ್ಕೆ ನಿರ್ಧರಿಸಲಾಗಿದೆ. ಡಿಸೆಂಬರ್ 3,4,5 ರಂದು ಮೂರು ದಿನಗಳ ಕಾಲ ಬರ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಿ ರೈತರ ಅಹವಾಲು ಆಲಿಸಲಿದೆ. ನಂತರ ರೈತರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಹೋರಾಟ ನಡೆಸಲಿದ್ದೇವೆ' ಎಂದು ಹೇಳಿದರು.
ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ಸಾಲಮನ್ನಾ, ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಚಳಿಗಾಲದ ಅಧಿವೇಶನದ ಆರಂಭದ ದಿನ ಬೆಳಗಾವಿಯಲ್ಲಿ ಬೃಹತ್ ರೈತ ಹೋರಾಟ ನಡೆಸಲೂ ಸಹ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿ.ಎಸ್.ಯಡಿಯೂರಪ್ಪ, ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಧೋರಣೆಯನ್ನು ಖಂಡಿಸಿ ಅಧಿವೇಶನ ಆರಂಭದ ದಿನವಾದ ಡಿಸೆಂಬರ್10 ರಂದು ಬೆಳಗಾವಿಯಲ್ಲಿ 1 ಲಕ್ಷ ರೈತರನ್ನು ಸೇರಿಸಿ ಬೃಹತ್ ಸಭೆಯನ್ನು ನಡೆಸಲಾಗುತ್ತದೆ. ಸದನದ ಒಳಗೆ ಮತ್ತೆ ಹೊರಗೆ ಬಿಜೆಪಿ ರೈತರ ಪರವಾಗಿ ಉಗ್ರ ಹೋರಾಟ ನಡೆಸಲಿದೆ ಎಂದು ಹೇಳಿದರು.