ನಾಳೆ ಅಥವಾ ನಾಡಿದ್ದು ಬಿಜೆಪಿ 3ನೇ ಪಟ್ಟಿ ಬಿಡುಗಡೆ: ಯಡಿಯೂರಪ್ಪ
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳು ಬೇಕಾಗಿದೆ. ಹಾಗಾಗಿ ಗೆಲ್ಲುವ ಅಭ್ಯರ್ಥಿಗಳು ಪಕ್ಷಕ್ಕೆ ವಲಸೆ ಬರುತ್ತಿರುವುದರಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಯಾರಿಗೆ ಟಿಕೆಟ್ ಸಿಕ್ಕಿಲ್ಲವೋ ಅವರು ಬೇಸರ ಮಾಡಿಕೊಳ್ಳುವುದು ಬೇಡ. ನಮ್ಮ ಪಕ್ಷ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಇಂದು ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದ್ದು, ಉಳಿದ 70 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಇದೇ ಮೇ 12ರಂದು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೇ 15ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.