ಇಂದು ಮಧ್ಯಾಹ್ನ 12ಗಂಟೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಮಧ್ಯಾಹ್ನ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರ : ಕರ್ನಾಟಕ ವಿಧಾನಸಭಾ ಚುನಾವಣೆ ಇದೆ ಮೇ 12ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಮಧ್ಯಾಹ್ನ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸುವ ಸಲುವಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್'ನಲ್ಲಿ ಬಂದಿಳಿದ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ ಇಂದು ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಲಿದೆ. ಕಳೆದ 5 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ಸರ್ಕಾರ. ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏ.8ರಂದು ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿತ್ತು. ನಂತರ ತನ್ನ ಎರಡನೇ ಪಟ್ಟಿಯನ್ನು 82 ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಇಂದು ಉಳಿದ 70 ಅಭ್ಯರ್ಥಿಗಳ ಹೆಸರನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದೆ.