ಸುಮಲತಾ ಅವರು ಬಿಜೆಪಿಗೆ ಬಂದರೆ ಸ್ವಾಗತ: ಬಿ.ಎಸ್.ಯಡಿಯೂರಪ್ಪ

ನಾವಾಗಿಯೇ ಸುಮಲತಾ ಅವರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಅವರಾಗಿಯೇ ಬಂದರೆ ಖಂಡಿತಾ ಸ್ವಾಗತಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Last Updated : May 25, 2019, 11:24 AM IST
ಸುಮಲತಾ ಅವರು ಬಿಜೆಪಿಗೆ ಬಂದರೆ ಸ್ವಾಗತ: ಬಿ.ಎಸ್.ಯಡಿಯೂರಪ್ಪ title=

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಸೇರಲು ಬಯಸಿದರೆ ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾವಾಗಿಯೇ ಸುಮಲತಾ ಅವರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಅವರಾಗಿಯೇ ಬಂದರೆ ಖಂಡಿತಾ ಸ್ವಾಗತಿಸುತ್ತೇವೆ. ರಾಜ್ಯದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಒಳ್ಳೆಯ ಸಂದೇಶ ನೀಡಿದ್ದಾರೆ. ಅದೇ ರೀತಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಈಗ ಅವರು ಜಯಗಳಿಸಿರುವುದರು ಸಂತಸದ ವಿಚಾರ" ಎಂದಿದ್ದಾರೆ.

ಅಪ್ಪ-ಮಕ್ಕಳು ಕಾಂಗ್ರೆಸ್ ಅನ್ನು ಮುಗಿಸಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಲೋಕಸಭೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಸೇರಿ ಕಾಂಗ್ರೆಸ್ ಅನ್ನು ಮುಗಿಸಲಿದ್ದಾರೆ ಎಂದು ನನ್ನ 40 ವರ್ಷಗಳ ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ಹೇಳಿದ್ದೆ. ಈಗ ಲೋಕಸಭೆ ಚುನಾವಣೆಯಲ್ಲಿ ಅದು ಸಾಬೀತಾಗಿದೆ.  ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದೇವೆ. ಮುಂದಿನ ದಿನಗಳಲ್ಲಿ ಅವರು ಹೇಗೆ ಆಡಳಿತ ನಡೆಸುತ್ತಾರೆ ಎಂಬುದನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಸುಮಲತಾ ಭಾರೀ ಜಯ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ಘೋಷಣೆ ಮಾಡಿತ್ತು.

Trending News