ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇಂದು ಸಂಜೆ 6 ರಿಂದ 6:15 ರೊಳಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಸಲು ರಾಜ್ಯಪಾಲ ವಾಜುಬಾಯಿ ವಾಲಾ ಅನುಮತಿ ನೀಡಿದ್ದಾರೆ. ಬಿಎಸ್ವೈ ತಮ್ಮ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಇಬ್ಬರಿಗೆ ವಿಶೇಷ ಆಹ್ವಾನ ನೀಡಿದ್ದಾರೆ.
ರಾಜಭವನದ ಬಳಿ ಬಿಜೆಪಿ ಸರ್ಕಾರ ರಚನೆ ಬಗ್ಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲು ಸಮಯ ಕೋರಿದ್ದೆ. ಇಂದು ಸಂಜೆ 6 ರಿಂದ 6.15ರೊಳಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ಸಮ್ಮತಿಸಿ ಅನುಮತಿ ಪತ್ರವನ್ನೂ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
BS Yeddyurappa,BJP: I just met the Governor, I will take oath as Chief Minister today at 6 pm. #Karnataka pic.twitter.com/LkemKmqQP6
— ANI (@ANI) July 26, 2019
ಪ್ರಮಾಣವಚನ ಸಮಾರಂಭಕ್ಕೆ ವಿಶೇಷ ಆಹ್ವಾನ:
ಈ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ಎಲ್ಲಾ ಶಾಸಕರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಆಹ್ವಾನಿಸುತ್ತಿದ್ದೇನೆ. ಈ ಬಗ್ಗೆ ಪತ್ರವನ್ನೂ ಬರೆಯುತ್ತೇನೆ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿ ಪ್ರಮಾಣವಚನ ಸಮಾರಂಭಕ್ಕೆ ಬಂದು ಸಹಕರಿಸುವಂತೆ ಕೋರುತ್ತೇನೆ ಎಂದರು.
ಈ ವೇಳೆ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆಯೇ? ಅಥವಾ ಜೊತೆಗೆ ಬೇರೆ ಸಚಿವರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ಈ ಕುರಿತು ಅಮಿತ್ ಶಾ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.